ಮೈಸೂರು,ಜುಲೈ,25,2023(www.justkannada.in): ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸಮುದ್ರ ಮಟ್ಟದಿಂದ 2284 ಅಡಿ ಗರಿಷ್ಠ ಸಾಮರ್ಥ್ಯವಿರುವ ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 2280.51 ಅಡಿಗಳಿಗೆ ಏರಿಕೆಯಾಗಿದೆ.
ಜಲಾಶಯಕ್ಕೆ ಇಂದಿನ ಒಳಹರಿವು 25896 ಕ್ಯೂಸೆಕ್ ಗೆ ಹೆಚ್ಚಳವಾಗಿದ್ದು, ಜಲಾಶಯದಿಂದ 11250 ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಕಬಿನಿ ಜಲಾಶಯ ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನ ಹೊಂದಿದ್ದು ಪ್ರಸ್ತುತ 17.34 ಟಿಎಂಸಿ ನೀರು ಸಂಗ್ರಹವಾಗಿದೆ.
ಕಬಿನಿ ಜಲಾಶಯದ ಹೊರಹರಿವು ಯಾವುದೇ ಕ್ಷಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, ಹೀಗಾಗಿ ಕಪಿಲಾ ನದಿಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
Key words: Increase – inflow rate -Kabini Reservoir-Warning – flood