ಹುಬ್ಬಳ್ಳಿ, ನವೆಂಬರ್ 7,2024 (www.justkannada.in): ವಕ್ಫ್ ಆಸ್ತಿ ವಿವಾದದಲ್ಲಿ ಆಡಳಿತ ವ್ಯವಸ್ಥೆಯ ಕೈವಾಡವಿದೆ. ರಾಜ್ಯ ಸರ್ಕಾರ ಸೂಚನೆಯಂತೆ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದಾರೆ ಎಂದು ವಕ್ಫ್ ಬೋರ್ಡ್ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಗಂಭೀರ ಆರೋಪ ಮಾಡಿದರು.
ರಾಜ್ಯ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಪರಿಶೀಲನೆಗಾಗಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ವಕ್ಫ್ ಬೋರ್ಡ್ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಇಂದು ಹುಬ್ಬಳ್ಳಿಗೆ ಭೇಟಿ ನೀಡಿ ರೈತರ ಅಹವಾಲು ಸ್ವೀಕಾರ ಮಾಡಿದರು. ಬಳಿಕ ಮಾತನಾಡಿದ ಅವರು, ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಈ ರೀತಿ ಆಗಲು ಸಾಧ್ಯವಿಲ್ಲ, ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ರೈತರ ಜಮೀನು, ದೇಗುಲ, ಪಾರಂಪರಿಕ ತಾಣಗಳ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಈ ಸಂಬಂಧ 70ಕ್ಕೂ ಹೆಚ್ಚು ಅಹವಾಲು ಬಂದಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಸೂಚನೆಯಂತೆ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಈಗ ರೈತರಿಗೆ ಕೊಟ್ಟ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಕೈವಾಡ ಇಲ್ಲದೆ ಆಸ್ತಿ ಕಬಳಿಸಲು ಸಾಧ್ಯವಿಲ್ಲ. ಸರ್ಕಾರದ ಸೂಚನೆ ಇಲ್ಲದೆ ಅಧಿಕಾರಿಗಳು ಹೇಗೆ ಕೆಲಸ ಮಾಡ್ತಾರೆ? ಇದು ಅತ್ಯಂತ ಗಂಭೀರವಾದ ವಿಚಾರ. ಎಲ್ಲ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ ವರದಿ ತಯಾರಿಸುತ್ತೇವೆ ಎಂದೂ ಜಗದಾಂಬಿಕಾ ಪಾಲ್ ತಿಳಿಸಿದರು.
Key words: Jagdambika Pal, waqf, property, state government