ಬೆಂಗಳೂರು,ನವೆಂಬರ್,12,2022(www.justkannada.in): ನಿನ್ನೆ ನಡೆದ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಆಹ್ವಾನಿಸದೇ ಇರುವುದಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ಧ ರಾಜ್ಯ ಜೆಡಿಎಸ್ ಘಟಕ ಇದೀಗ ಮತ್ತೆ ಗುಡುಗಿದೆ.
ನಿನ್ನೆಯ ಜೆಡಿಎಸ್ ಟ್ವೀಟ್ ಗಳಿಗೆ ಪ್ರತ್ಯುತ್ತರ ನೀಡಿದ್ದ ಬಿಜೆಪಿ, ಹೆಚ್.ಡಿ ದೇವೇಗೌಡರಿಗೆ ಆಮಂತ್ರಣ ಪತ್ರಿಕೆಯನ್ನೂ ತಲುಪಿಸಿದ್ದೇವೆ, ದೊಡ್ಡಗೌಡರಿಗೆ ಫೋನೂ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಅವರೇ ಹೇಳಿದ್ದರು.
ಈ ಕುರಿತು ಮತ್ತೆ ಟ್ವೀಟ್ ಮಾಡಿರುವ ಜೆಡಿಎಸ್, ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಹೆಚ್.ಡಿ ದೇವೇಗೌಡ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಟೀಕಿಸಿದೆ.
ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಪತ್ರ ಬರೆದಿದ್ದು ಯಾವಾಗ? ಆ ಪತ್ರ ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಸಿಎಂ ಪತ್ರವನ್ನು ‘ಸಂಘ ಸಂಸ್ಕಾರ’ದ ಬಿಜೆಪಿಗರು ಗಮನಿಸಬೇಕು ಎಂದು ಬಿಜೆಪಿ ಉತ್ತರಕ್ಕೆ ಚಾಟಿಯೇಟು ನೀಡಿದೆ.
ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಕುಟುಕಿದೆ.
ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ವಾಗ್ದಾಳಿ ನಡೆಸಿದೆ.
ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ: ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ..
ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಹಾಕಿದೆ.
‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಜೆಡಿಎಸ್ ಗುಡುಗಿದೆ.
ಇನ್ನು ಜೆಡಿಎಸ್ ಕುಟುಂಬ ರಾಜಕಾರಣ ಎಂದು ಟೀಕಿಸಿದ ಬಿಜೆಪಿಗೆ ತಿರುಗೇಟು ನೀಡಿರುವ ಜೆಡಿಎಸ್, ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?
ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಟಾಂಗ್ ನೀಡಿದೆ.
Key words: JDS-FormerPM-HD devegowda-kempegowda-statue-bjp