ಶ್ರೀನಗರ:ಜೂ-23:(www.justkannada.in) ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಶೋಪಿಯಾನ್ ಜಿಲ್ಲೆಯ ದಂರಂದೋರಾ ಪ್ರದೇಶದ ಕೀಗಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಮೊದಲು ಪತ್ತೆ ಕಾರ್ಯಾಚರಣೆ ನಡೆಸಿತು. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಬಳಿಕ ಎನ್ ಕೌಂಟರ್ ಕಾರ್ಯಾಚರಣೆ ತೀವ್ರಗೊಳಿಸಿದ ಸೇನೆ, ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಹಣ್ಣುಗಳ ಮರದ ತೋಪು ಮತ್ತಿತರ ಪ್ರದೇಶಗಳಲ್ಲಿ ಉಗ್ರರು ಅಡಗಿದ್ದರು. ಅವರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಹಿನ್ನಲೆಯಲ್ಲಿ ನಾವೂ ಕೂಡ ಪ್ರತಿಯಾಗಿ ದಾಳಿ ನಡೆಸಿದ್ದೇವೆ. ಧರಂದೋರಾ ಹಳ್ಳಿಯ ಸುತ್ತಲೂ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಈಗ ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾಗಿರುವ ಉಗ್ರರ ಗುರುತಿಸುವಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂಜಾಗೃತಾ ಕ್ರಮವಾಗಿ ಈ ಪ್ರದೇಶದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.