ಬೆಂಗಳೂರು, ಮೇ 03, 2020 (www.justkannada.in): ಸರ್ಕಾರಿ ಇಲಾಖೆಗಳೇ ಕನ್ನಡ ಅನುಷ್ಠಾನವನ್ನು ಗಾಳಿಗೆ ತೂರಿರುವುದು ಸರಿಯಾದ ಕ್ರಮವಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ.
ಆಡಳಿತದ ಎಲ್ಲಾ ಹಂತದಲ್ಲಿ ಪರಿಪೂರ್ಣವಾಗಿ ಕನ್ನಡ ಬಳಕೆಯಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದರೂ ಕಳೆದ 2 ತಿಂಗಳಿಂದ ಆಡಳಿತದ ಕೇಂದ್ರ ಸ್ಥಾನವಾದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಹಿರಿಯ ಮತ್ತು ಕಿರಿಯ ಅಧಿಕಾರಿಗಳು ಆಂಗ್ಲ ಭಾಷೆಯಲ್ಲಿ ಸುತ್ತೋಲೆ, ಆದೇಶಗಳನ್ನು ಹೊರಡಿಸಿದ್ದಾರೆ.
ಅಲ್ಲದೆ ಬಿಬಿಎಂಪಿ, ಪೊಲೀಸ್ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಸಾರಿಗೆ ಇಲಾಖೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಸರ್ಕಾರದ ಕನ್ನಡ ಅನುಷ್ಠಾನದ ಆದೇಶವನ್ನು ಗಾಳಿಗೆ ತೂರಿದ್ದಾರೆ.
ಈ ಬಗ್ಗೆ ಅಧಿಕಾರಿಗಳಿಗೆ ಮತ್ತು ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಉಲ್ಲೇಖಿಸಿದ್ದಾರೆ.