ಬೆಂಗಳೂರು,ಜನವರಿ,31,2024(www.justkannada.in): ವಾಣಿಜ್ಯ ಮಳಿಗೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ನಾಮಫಲಕ ಹಾಕಬೇಕು ಎಂದು ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಂಬಂಧಿತ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದು, ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು.
ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರವು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಆದರೆ ಥಾವರ್ ಚಂದ್ ಗೆಹ್ಲೋಟ್ ಅವರು ಅದನ್ನು ವಿಧಾನಸಭೆಯಲ್ಲಿ ಅಂಗೀಕರಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Key words: Kannada mandatory – nameplates- Governor-Thavarchand gehlot