ಬೆಂಗಳೂರು ,ಜುಲೈ,10,2021(www.justkannada.in): ಕೆಆರ್ ಎಸ್ ಡ್ಯಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಮತ್ತು ತಮ್ಮ ನಡುವಿನ ವಾಕ್ಸಮರಕ್ಕೆ ಹೆಚ್.ಡಿ ಕುಮಾರಸ್ವಾಮಿ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.
ಹೌದು, ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾರ್ಯಕರ್ತ ಬಂದುಗಳೆ, ಅಭಿಮಾನಿ ಅಣ್ಣತಮ್ಮಂದಿರೆ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ.ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.
ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಮತ್ತು ತಮ್ಮ ನಡುವಿನ ವಾಕ್ಸಮರಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ.
ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Key words: KRS Dam- Crack – formerCM-HD Kumaraswamy – activists – Twitter