ಬೆಂಗಳೂರು:ಆ-14:(www.justkannada.in) ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಜಾರಿಗೆ ತಂದಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಸರಕಾರಿ ಇಂಗ್ಲೀಷ್ ಶಾಲೆ) ಯೋಜನೆ ಯಶಸ್ವಿಯಾಗಿದೆ. ಈಗಾಗಲೇ 724 ಶಾಲೆಗಳಲ್ಲಿ 25,000ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿಯವರು ಈ ವರ್ಷ ಜಾರಿಗೆ ತಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾದ್ಯಮಕ್ಕೆ ಚಾಲನೆ ನೀಡಿದ್ದರು. ವಿಧಾನಸೌಧದ ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಮೊದಲ ಹಂತವಾಗಿ 176 ಪಬ್ಲಿಕ್ ಸ್ಕೂಲ್ ಪ್ರಾರಂಭ ಮಾಡಲಾಗಿತ್ತು. ಬಳಿಕ ಒಂದು ಸಾವಿರ ಸರ್ಕಾರಿ ಶಾಲೆಯಲ್ಲಿ 1 ನೇ ತರಗತಿಯಿಂದ ಇಂಗ್ಲೀಷ್ ಮಾಧ್ಯಮ ಪ್ರಾರಂಭಿಸಲಾಗಿತ್ತು.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಗೈದ್ದು, ಈಗಾಗಲೇ 724 ಶಾಲೆಗಳಲ್ಲಿ 26,156 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಪ್ರಾರಂಭಿಸಲು ರಾಜ್ಯದಾದ್ಯಂತ ಭಾರಿ ಬೇಡಿಕೆಗಳು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಇನ್ನೂ 1,000 ಕ್ಕೂ ಹೆಚ್ಚು ಶಿಕ್ಷಕರಿಗೆ ತರಬೇತಿ ನೀಡಲು ಮುಂದಾಗಿದೆ. ಅಲ್ಲದೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಇನ್ನೂ 1,000 ಶಾಲೆಗಳನ್ನು ಮತ್ತು ಬೆಂಗಳೂರಿನಲ್ಲಿ ಒಟ್ಟು 112 ಶಾಲೆಗಳಲ್ಲಿ ಸರಕಾರಿ ಪಬ್ಲಿಕ್ ಸ್ಕೂಲ್ ಯೋಜನೆ ಅನುಷ್ಠಾನಕ್ಕೆ ತರಲು ಗುರುತಿಸಿದೆ.
ಬೆಂಗಳೂರು ಗ್ರಾಮಾಂತರದಲ್ಲಿ 12 ಶಾಲೆಗಳು ಹಾಗೂ ಬೆಂಗಳೂರು ನಗರದಲ್ಲಿ 100 ಶಾಗಳಿದ್ದು, ಅಲ್ಲಿ ಆಂಗ್ಲ ಮಾಧ್ಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಗ್ರಾಮೀಣ ಬೆಂಗಳೂರಿನಲ್ಲಿ 357 ವಿದ್ಯಾರ್ಥಿಗಳು, ಬೆಂಗಳೂರು ದಕ್ಷಿಣದಲ್ಲಿ 1,750 ವಿದ್ಯಾರ್ಥಿಗಳು ಮತ್ತು ಬೆಂಗಳೂರು ಉತ್ತರದ 1,544 ವಿದ್ಯಾರ್ಥಿಗಳು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ನೇ ತರಗತಿಗೆ ಪ್ರವೇಶ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.