ಬೆಂಗಳೂರು, ಜೂನ್,29,2023(www.justkannada.in): ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸತತ 30 ಗಂಟೆಗಳ ಶೋಧ ನಡೆಸಿದ್ದರು. ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು ಬಂಧಿಸಲಾಗಿದ್ದು, 24 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಅಜಿತ್ ರೈಗೆ ಸಂಬಂಧಿಸಿದ 11 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್ಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಜಿತ್ ರೈ ಬಂಧಿಸಲಾಗಿದೆ.
Key words: Lokayukta-police- arrested -Tehsildar -Ajit Rai.