ಬೆಂಗಳೂರು,ಸೆಪ್ಟಂಬರ್,12,2023(www.justkannada.in): ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೇ ಕಾಪಾಡಬೇಕು. ಪರಿಸರ ಹಾನಿಯಾಗದಂತೆ ಹಬ್ಬ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು.
ಇಂದು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ, ಹಬ್ಬದ ವೇಳೆ ಕೋಮುಶಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವ ಧರ್ಮದವರಿಗೂ ತೊಂದರೆಯಾಗಬಾರದು ಎಂದು ತಿಳಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ, ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು ಆರು ಜನ ಸತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು. ಇತ್ತೀಚೆಗೆ ಡೆಂಘಿ ಜ್ವರ ಜಾಸ್ತಿ ಆಗಿದೆ. ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4000ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಈ ಸಾಂಕ್ರಾಮಿಕ ತಡೆಗಟ್ಟಲು ಒತ್ತು ನೀಡಬೇಕು ಎಂದು ಸೂಚಿಸಿದರು.
ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು. ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು. ಗೊಬ್ಬರವನ್ನು ಎಂ.ಆರ್.ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಒಟ್ಟಾರೆಯಾಗಿ ನಿಮ್ಮ ವೈಫಲ್ಯದಿಂದ ಜನರ ನಿರೀಕ್ಷೆ ಹುಸಿಯಾಗಬಾರದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಿರಿ ಎಂಬ ವಿಶ್ವಾಸ ನನಗಿದೆ. ಹೊಸ ಸರ್ಕಾರದ ಇಚ್ಛೆ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕಾಗುತ್ತದೆ. ಸರ್ಕಾರ ಇದರಲ್ಲಿ ಮುಂದೆ ಇದೆ ಎಂದು ಸಿದ್ಧರಾಮಯ್ಯ ತಿಳಿಸಿದರು.
ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಈಗ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಐದನೇ ಗ್ಯಾರಂಟಿಯನ್ನು ಮುಂದಿನ ವರ್ಷ ಜನವರಿಯಿಂದ ಪ್ರಾರಂಭ ಮಾಡಲು ಉದ್ದೇಶಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಹಣದ ತೊಂದರೆ ಇಲ್ಲ.ಇದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಅಧಿಕಾರಿಗಳಿಗೆ ಅನಗತ್ಯವಾಗಿ ಶಿಕ್ಷೆ ನೀಡುವುದಿಲ್ಲ. ಆದರೆ ತಪ್ಪು ಮಾಡಿದರೆ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದರು.
Key words: Maintain -law and order – Ganesh festival- CM Siddaramaiah -instructs.