ಬೆಂಗಳೂರು, ಸೆಪ್ಟಂಬರ್,10,2024 (www.justkannada.in): ಸೆಪ್ಟಂಬರ್ 22 ರಂಸು ಯುಪಿಎಸ್‌ಸಿ ಮುಖ್ಯಪರೀಕ್ಷೆ ಇದ್ದು ಅದೇ ದಿನ ಪಿಎಸ್ ಐ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿರುವ ಹಿನ್ನೆಲೆ ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾದ ಮಾಜಿ ಡಿಸಿಎಂ ಅಶ್ವತ್ ನಾರಾಯಣ್, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗ, ಪಿಎಸ್ ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ ಬಗ್ಗೆ ಮನವಿ ಸಲ್ಲಿಸಿತು.
ಮನವಿ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗದಿ ಮಾಡಿದ್ದಾರೆ. ಪಿಎಸ್ ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್ ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.
Key words: Minister, Dr. G. Parameshwar, postponement, PSI exam