ಬಿ-ಖಾತಾ ಅಭಿಯಾನಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ

ಮೈಸೂರು,ಮಾರ್ಚ್,1,2025 (www.justkannada.in):  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಶನಿವಾರ ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ರಾಜ್ಯ ಸರ್ಕಾರವು ಈ ಐತಿಹಾಸಿಕ ತೀರ್ಮಾನವನ್ನು ಕೈಗೊಂಡಿದ್ದು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಿಲ್ಲದೆ ನಿವೇಶನಗಳಲ್ಲಿ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ತಿಳಿಸಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಮುಂತಾದವರು ಉಪಸ್ಥಿತಿದ್ದರು.

Key words: Minister, Dr. H.C. Mahadevappa, B-Khata campaign, mysore