ಬೆಂಗಳೂರು,ಜುಲೈ, 2,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಸರ್ಕಾರದ ವತಿಯಿಂದ ಯಾರೂ ಹೋಗಿಲ್ಲ ಎಂಬ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ದುರಂತ ಸಂಭವಿಸಿದಾಗ ಮೊದಲು ಭೇಟಿ ಕೊಟ್ಟಿದ್ದೇ ನಾನು. ನಂತರ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ. ನಾನು ರಾಜ್ಯ ಸರ್ಕಾರದ ಭಾಗವಲ್ಲವೇ ಎಂದು ತಿರುಗೇಟು ನೀಡಿದರು.
ನಾನು ಬೇರೆಯವರಿಂದ ಹೇಳಿಸಿಕೊಂಡು ಕೆಲಸ ಮಾಡಬೇಕಿಲ್ಲ. ನನಗೆ ಅಂತಹ ಅನಿವಾರ್ಯತೆ ಇಲ್ಲ. ಬೇರೆ ರಾಜ್ಯದಲ್ಲಿ ನಡೆದ ಘಟನೆಗಳ ಬಗ್ಗೆ ನಾನು ಹೇಳಿಕೆಗಳನ್ನು ನೀಡಲ್ಲ. ಆದರೆ ಕಾರಿಡಾರ್ ಗಳಲ್ಲಿ ಮಲಗಿಸಿ ಚಿಕಿತ್ಸೆ ಕೊಟ್ಟ ಉದಾಹರಣೆಗಳಿವೆ. ನಮ್ಮ ರಾಜ್ಯದಲ್ಲಿ ಆಗಿರುವ ಕೆಲಸಗಳ ಬಗ್ಗೆ ಹೆಮ್ಮೆ ಇರಲಿ ಎಂದು ಡಿ.ಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.
10 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್, ಲಸಿಕೆ ಲಭ್ಯತೆ ಆಧಾರದಲ್ಲಿ ನೀಡುತ್ತೇವೆ. ಹಂತ ಹಂತವಾಗಿ ರಾಜ್ಯಕ್ಕೆ ಲಸಿಕೆ ಬರುತ್ತಿದೆ. ನೋಡಿಕೊಂಡು ಲಸಿಕೆ ನೀಡುವ ಕಾರ್ಯ ಮಾಡುತ್ತೇವೆ ಎಂದರು.
ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ವಿಚಾರ ಕುರಿತು ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ 24 ಲಕ್ಷ ಪದವಿ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತದೆ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಲಸಿಕೆ ನೀಡುತ್ತೇವೆ. ಲಸಿಕೆ ನೀಡಿದ ನಂತರ ಕಾಲೇಜು ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.
Key words: Minister- K.Sudhakar – accusations – KPCC president -DK Sivakumar