ಹಾವೇರಿ,ನವೆಂಬರ್,5,2024 (www.justkannada.in): ಮುಡಾ ಹಗರಣದಲ್ಲಿ ನನ್ನದೇನೂ ತಪ್ಪಿಲ್ಲ. ಆದರೆ ವಿನಾಕಾರಣ ನನ್ನ ತೇಜೋವಧೆ ಮಾಡಲಾಗುತ್ತಿದೆ. 14 ಸೈಟ್ ಗಾಗಿ ರಾಜಕಾರಣ ಮಾಡಬೇಕಾ? ಎಂದು ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ಗುಡುಗಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ನನ್ನ ಕುಟುಂಬ ಯಾವುದೇ ತಪ್ಪು ಮಾಡಿಲ್ಲ. 14 ಸೈಟ್ ಗಾಗಿ ರಾಜಕಾರಣ ಮಾಡಬೇಕಾ? ಬಿಜೆಪಿಯವರು ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ. ನಾನು ನಾಡಿನ ಜನತೆಯ ಪ್ರೀತಿ, ಒತ್ತಾಯಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿಯವರ ಷಡ್ಯಂತ್ರಗಳಿಗೆ ಬಗ್ಗದೂ ಇಲ್ಲ, ಜಗ್ಗದೂ ಇಲ್ಲ. ಎಲ್ಲಿಯವರೆಗೆ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ ಎಂದು ನುಡಿದರು.
40 ವರ್ಷಗಳಿಂದ ನಾನು ಮಂತ್ರಿ, ಮುಖ್ಯಮಂತ್ರಿ ಹೀಗೆ ವಿವಿಧ ಹುದ್ದೆಯಲ್ಲಿ ಸೇವೆ ಮಾಡಿದ್ದೇನೆ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ. ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ ಎಂದರು.
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಸಿಕ್ಕಿದೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
Key words: Muda case, Politics, 14 sites, CM Siddaramaiah