ಮೈಸೂರು,ಜನವರಿ,25,2022(www.justkannada.in): ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡಿನವರು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಡಗಲಪುರ ನಾಗೇಂದ್ರ, ನಮ್ಮ ದೇಶದಲ್ಲಿ ಇರುವಷ್ಟು ನದಿ ನೀರಿನ ಹಂಚಿಕೆ ವಿವಾದಗಳು ಬೇರೆಲ್ಲೂ ಇಲ್ಲ. ರಾಜಕೀಯ ಕಾರಣಗಳಿಗಾಗಿ ನದಿ ನೀರಿನ ಹಂಚಿಕೆ ವಿವಾದವನ್ನು ಜೀವಂತವಾಗಿಡಲಾಗುತ್ತಿದೆ. ನದಿ ನೀರಿನ ಹಂಚಿಕೆಯನ್ನು ಸದ್ಬಳಕೆ ಮಾಡಿಕೊಳ್ಳಲು ಆಯಾಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ. ಆದರೆ ತಮಿಳುನಾಡಿನ ಯೋಜನೆಗೆ ಅನುಮತಿ ನೀಡುವ ಕೇಂದ್ರ ಸರ್ಕಾರ ಕರ್ನಾಟಕದ ಯೋಜನೆಗೆ ಅನುಮತಿ ನೀಡುತ್ತಿಲ್ಲ. ಈ ವಿಚಾರದಲ್ಲಿ ಕೇಂದ್ರ ರಾಜಕಾರಣ ಮಾಡುತ್ತಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಕೇಂದ್ರ ನಡೆದುಕೊಳ್ಳುತ್ತಿದೆ. ಹೊಗೆನಕಲ್ ಯೋಜನೆ ಕಾವೇರಿ ತೀರ್ಪಿಗೆ ವಿರುದ್ಧವಾಗಿದೆ. ಆದರೆ ಮೇಕೆದಾಟು ಆ ರೀತಿ ಅಲ್ಲ. ತಮಿಳುನಾಡಿನವರು ಕುತಂತ್ರದ ರಾಜಕಾರಣ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ರೈತರ ಬೆಳೆಗೆ ಬೆಂಬಲ ಬೆಲೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಡಗಲಪುರ ನಾಗೇಂದ್ರ, ಈ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಇಬ್ಬಂದಿತನ ತೋರುತ್ತಿವೆ. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ವಿಫಲವಾಗಿವೆ. ವಿವಾದಿತ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಒಂದು ವರ್ಷ ಹೋರಾಟ ನಡೆಸಲಾಯಿತು. ಹೋರಾಟದ ಫಲವಾಗಿ ವಿವಾದಿತ ಕಾಯ್ದೆಗಳನ್ನು ಹಿಂಪಡೆಯಲಾಯಿತು. ಕಾಯ್ದೆಗಳನ್ನು ಹಿಂಪಡೆದ ವೇಳೆ ನೀಡಿದ್ದ ಭರವಸೆಗಳು ಹುಸಿಯಾಗಿವೆ. ಈ ವಿಚಾರದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ದ್ವಿಮುಖ ನೀತಿ ಅನುಸರಿಸುತ್ತಿವೆ. ಕೇಂದ್ರ ರಾಜ್ಯ ಸರ್ಕಾರಗಳು ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು. ರೈತರ ಬೆಳೆಗೆ ಸೂಕ್ತ ದರ ನಿಗದಿಪಡಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
Key words: mysore-badagalapur nagendra