ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಐಎಎಸ್ ಅಧಿಕಾರಿ ಬಿ. ಶರತ್ ಅವರಿಗೆ ನೋಟಿಸ್ ನೀಡಿದೆ.
ಮೈಸೂರು ಜಿಲ್ಲಾಧಿಕಾರಿಗೆ ಹುದ್ದೆಗೆ ರೋಹಿಣಿ ಸಿಂಧೂರಿಯವರನ್ನು ನೇಮಕ ಮಾಡಿದ ಆದೇಶ ಮರು ಪರಿಶೀಲಿಸಲು ಸಿಎಟಿ ನೀಡಿದ್ದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿದ ಮೇಲ್ಮನವಿ ಕುರಿತು ಸರಕಾರ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಇಂದು ವಿಚಾರಣೆ ನಡೆಸಿತು.
ಅರವಿಂದ ಕುಮಾರ್ ನೇತೃತ್ವದ ವಿಭಾಗೀಯ ಪೀಠದ ವಿಚಾರಣೆ ವೇಳೆ ಸರಕಾರಿ ವಕೀಲರು, ಈಗಾಗಲೇ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಬೇರೊಂದು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಯಾದ ಐಎಎಸ್ ಅಧಿಕಾರಿ ಬಿ.ಶರತ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿತು. ಜತೆಗೆ, ಅಂದು ಅರ್ಜಿಯ ಅಂತಿಮ ವಿಚಾರಣೆ ನಡೆಸಲಾಗುವುದು ಎಂದು ಹೇಳಿತು.
ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿಯನ್ನು ನೇಮಕ ಮಾಡಿದ ಆದೇಶ ಮರು ಪರಿಶೀಲಿಸುವಂತೆ ಸರಕಾರಕ್ಕೆ ಸೂಚಿಸಿದ ಸಿಎಟಿಯ ಆದೇಶ ಪ್ರಶ್ನಿಸಿ ಬಿ.ಶರತ್ ಕೂಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಂಧೂರಿ ವರ್ಗಾವಣೆ ಆದೇಶ ಮರುಪರಿಶೀಲಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಮಂಡಳಿ ಸಿಎಟಿ ರಚಿಸಲು ಸೂಚಿಸಿದ ಸಿಎಟಿ ಆದೇಶ ಪ್ರಶ್ನಿಸಿ ಸರಕಾರವೂ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಎರಡೂ ಅರ್ಜಿಗಳನ್ನು ಹೈಕೋರ್ಟ್ಗೆ ಒಟ್ಟಿಗೆ ವಿಚಾರಣೆ ನಡೆಸುತ್ತಿದೆ.