ಬೆಂಗಳೂರು, ಅಕ್ಟೋಬರ್ 27, 2022 (www.justkannada.in): ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರ ತಳಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ ಕೆಲ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗಬೇಕು. ಕೋವಿಡ್ ಪರೀಕ್ಷೆಗೆ ಒಳಗಾದವರು ಕಡ್ಡಾಯವಾಗಿ ಪ್ರತ್ಯೇಕವಾಗಿ ಮನೆಯಲ್ಲಿ ಸ್ವಯಂ ಪ್ರೇರಿತವಾಗಿ ಇರುವಂತೆ ಸೂಚಿಸಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಗೆ ತೆರಳಿ, ವೈದ್ಯಕೀಯ ಆರೈಕೆಯನ್ನು ಪಡೆಯಬೇಕು. ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ ಬೆಳಕಿಲ್ಲದಿರುವ ಸ್ಥಳಗಳು, ಮುಚ್ಚಿದ ಸಂರಕ್ಷಣೆಯ ಜನಸಂದಣಿಯ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.