ಹಾಸನ,ಏಪ್ರಿಲ್,17,2021(www.justkannada.in): ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಹೋಬಳಿ ಮಟ್ಟದಿಂದಲೂ ಲಸಿಕೆ ವಿತರಣೆ ಅಭಿಯಾನ ನಡೆಸಬೇಕು ಎಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊವಿಡ್ ನಿಯಂತ್ರಣ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಗೋಪಾಲಯ್ಯ, ಜಿಲ್ಲೆಯಲ್ಲಿ ಕೊರೋನಾ ಲಸಿಕೆ ಕೊರತೆಯಿಲ್ಲ ಆದ್ದರಿಂದ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೊರೋನಾ ಲಸಿಕೆ ಕೊರತೆಯಾಗದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಜಿಲ್ಲಾ ಆಸ್ಪತ್ರೆಯ ಕೊವಿಡ್ ಚಿಕಿತ್ಸಾ ಕೇಂದ್ರದಲ್ಲಿ ಈಗಾಗಲೇ 180 ರೋಗಿಗಳು ಕೊವಿಡ್ ಚಿಕಿತ್ಸೆ ಪಡೆಯುತ್ತಿದ್ದು 250-ಬೆಡ್ ಗಳನ್ನು ಮೀಸಲಿಡಲಾಗಿದೆ. ಕೊವಿಡ್ ಚಿಕಿತ್ಸೆ ಸಂಬಂಧ ಜಿಲ್ಲೆಯಲ್ಲಿ ಯಾವುದೇ ನ್ಯೂನ್ಯತೆ ಇಲ್ಲ ಎಂದು ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದರು.
ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಸಹ ಕೊವಿಡ್ ಚಿಕಿತ್ಸಾ ಕೇಂದ್ರ ತೆರೆದು ಅಗತ್ಯ ಔಷಧಿ ಹಾಗೂ ಚಿಕಿತ್ಸೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದ್ದು ಅಗತ್ಯ ಸಿಬ್ಬಂದಿ ಹಾಗೂ ಔಷಧಿಗಳ ಕೊರತೆ ನೀಗಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅರಕಲಗೂಡು -ಅರಸೀಕೆರೆಯಲ್ಲಿ ರಕ್ತ ಪರೀಕ್ಷಾ ಕೇಂದ್ರದ ಕೊರತೆಯಿದ್ದು ಇದರಿಂದ ಸರಿಯಾದ ಸಮಯಕ್ಕೆ ರೋಗಿಗಳು ಚಿಕಿತ್ಸೆ ಪಡೆಯಲು ವಿಳಂಬವಾಗುತ್ತಿದೆ ಎಂದು ಶಾಸಕ ಎ.ಟಿ ರಾಮಸ್ವಾಮಿ ಸಭೆಯ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿ ಅಗತ್ಯ ಕ್ರಮಕ್ಕೆ ತಿಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದೆ ಹಾಗೂ ಈ ಸಂಬಂಧ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಲಾಗಿದೆ. ಕೊವಿಡ್ ಚಿಕಿತ್ಸೆ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ಒದಗಿಸಬೇಕು ಇಲ್ಲವಾದಲ್ಲಿ ಆಸ್ಪತ್ರೆ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಗೋಪಾಲಯ್ಯ ಹೇಳಿದರು.
ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಂದ ಹೆಚ್ಚು ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಈ ಸಂಬಂಧ ಸಾರಿಗೆ ಇಲಾಖೆ ಹಾಗೂ ಆರ್ ಟಿಒ ಅಧಿಕಾರಿಗಳ ಸಭೆ ಕರೆದು ನಿರ್ದೇಶನ ನೀಡಲಾಗುವುದು ಹಾಗೂ ಮುಂದೆ ಇಂತಹ ಅಕ್ರಮ ನಡೆಯದಂತೆ ತಡೆಯಲಾಗುವುದು ಎಂದು ಸಚಿವ ಗೋಪಾಲಯ್ಯ ಭರವಸೆ ನೀಡಿದರು.
Key words: no shortage -covid vaccine – district-Vaccine center – Hobali level-Minister- K Gopalaiah.