ಬೆಂಗಳೂರು,ಮೇ,11,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ ಪ್ರಾಧಿಕಾರದ ಉನ್ನತ ಮಟ್ಟದ ಸಮಿತಿ ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದೆ.
ಪ್ರಕರಣದ ಬಗ್ಗೆ ನಿವೃತ್ತ ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಇಂದು ಹೈಕೋರ್ಟ್ ಸಿಜೆ ಎ.ಎಸ್. ಓಕ್ ಮತ್ತು ಹಿರಿಯ ನ್ಯಾ.ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯಪೀಠದ ಮುಂದೆ ಮೊಹರು ಮಾಡಿದ ಲಕೋಟೆಯಲ್ಲಿ ತನಿಖಾ ವರದಿಯನ್ನು ಸಲ್ಲಿಸಿದೆ.
ನ್ಯಾಯಾಲಯದ ನಿರ್ದೇಶನದಂತೆ ಸಲ್ಲಿಸಲಾಗಿರುವ ವರದಿಯನ್ನು ಬಹಿರಂಗಪಡಿಸುವ ಕುರಿತು ಹೈಕೋರ್ಟ್, ಪರಿಶೀಲಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ನಾಳೆ ವರದಿ ಬಹಿರಂಗವಾಗುವ ಸಾಧ್ಯತೆ ಇದೆ. ಈ ಮಧ್ಯೆ, ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಹೈಕೋರ್ಟ್ ಸ್ವತಃ ಕಾನೂನು ಪ್ರಾಧಿಕಾರದ ಸಮಿತಿಗೆ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಸರಕಾರ ಘಟನೆಯ ಬಗ್ಗೆ ತನಿಖೆ ನಡೆಸಿ ಪ್ರಾಥಮಿಕ ವರದಿ ಸಲ್ಲಿಸಲು ಹಿರಿಯ ಐಎಎಸ್ ಅಧಿಕಾರಿಯನ್ನು ನಿಯೋಜಿಸಲಾಗಿದ್ದು, ಆದರೆ ಅದನ್ನು ತಡೆಹಿಡಿಯಲಾಗಿದೆ. ಸದ್ಯ ತನಿಖೆ ನಡೆಸುತ್ತಿಲ್ಲ. ನ್ಯಾಯಾಲಯದ ನಿರ್ದೇಶದನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್ ಸಿಜೆ ಎಎಸ್ ಓಕಾ, ಹಾಗಿದ್ದರೆ ಸರಕಾರದಿಂದ ತನಿಖೆ ಸ್ಥಗಿತಗೊಳಿಸಲಾಗಿದೆ ಎಂಬ ಕುರಿತು ಮೆಮೋ ಸಲ್ಲಿಸಿ, ಆನಂತರ ನ್ಯಾಯಾಲಯ, ನ್ಯಾಯಾಂಗ ತನಿಖೆ ಮುಂದುವರಿಸುವ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಹೇಳಿ ವಿಚಾರಣೆಯನ್ನು ನಾಳೆಗೆ(ಬುಧವಾರ) ಮುಂದೂಡಿದರು.
Key words: oxygen- disaster-chamarajanagar-committee- submitted -report