ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಕಲ್ಲು ತೂರಾಟ: ಹಲವರು ವಶಕ್ಕೆ

ಬೆಳಗಾವಿ,ಡಿಸೆಂಬರ್,10,2024 (www.justkannada.in): 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ  ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಸುವರ್ಣ ಸೌಧಕ್ಕೆ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಲಾಠಿಚಾರ್ಜ್ ಗೆ ಮುಂದಾದ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ  ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಸಮಾವೇಶದ ಬಳಿಕ ಪ್ರತಿಭಟನಾಕಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.   ಲಾಠಿಚಾರ್ಜ್ ವೇಳೆ 50 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರಿಗೂ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.  ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಎಂಎಲ್ ಸಿ ಯೊಬ್ಬರಿಗೆ ಸೇರಿದ ಕಾರು, ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ವಾಹನಗಳ ಗಾಜು ಪುಡಿಪುಡಿಯಾಗಿವೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು,ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಶಕ್ಕೆ

ಪ್ರತಿಭಟನೆಯ ನೇತೃತ್ವ ವಹಿಸಿರುವ ಕುಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಈರಣ್ಣ ಕಡಾಡಿ, ಅರವಿಂದ ಬೆಲ್ಲದ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Key words: Panchamasali, protest, violent, Stone pelting,