ಮೈಸೂರು,ಜೂ,23,2020(www.justkannada.in): ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನ ಪಾಲನೆ ಮಾಡಲಾಗುತ್ತದೆ. ಹೀಗಾಗಿ ಪೋಷಕರು ನಿಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಪಾಡುರಂಗ ಅವರು ತಿಳಿಸಿದರು.
ಇದೇ ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು ಈ ಹಿನ್ನೆಲೆ ಮೈಸೂರಿನಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಲಾಗಿದೆ. ಇಂದು ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಒಟ್ಟು 139 ಪರೀಕ್ಷಾ ಕೇಂದ್ರಗಳಿವೆ. ಕೊರೊನಾ ನಡುವೆ ಈ ಬಾರಿ 39, 822ವಿದ್ಯಾರ್ಥಿಗಳುಪರೀಕ್ಷೆ ಬರೆಯಲಿದ್ದಾರೆ. ನಗರದಲ್ಲಿ 85 ಗ್ರಾಮೀಣಾ ಭಾಗದಲ್ಲಿ 54 ಪರೀಕ್ಷಾ ಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು, ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನ ಪಾಲನೆ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೆವೆ. ಪರೀಕ್ಷಾ ಕೇಂದ್ರಗಳಲ್ಲಿ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಆರೋಗ್ಯದಲ್ಲಿ ವ್ಯತ್ಯಯವಿರುವ ಮಕ್ಕಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಇದೆ. ಒಂದು ಬೆಂಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಂಟೋನ್ಮೆಂಟ್ ಜೋನ್ನಿಂದ ಬರುವ ಮಕ್ಕಳಿಗೆ ಪ್ರತ್ಯೇಕ ಕೊಠಡಿ, ಮೇಲ್ವಿಚಾರಕರನ್ನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಬರುವ ಮಕ್ಕಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಮಕ್ಕಳಿಗೆ ಸೂಕ್ತವಾದ ಸಲಹೆ, ಮಾರ್ಗದರ್ಶನವನ್ನ ಶಿಕ್ಷಣ ಇಲಾಖೆಯ ಸೂಚನೆಯಂತೆ ನೀಡಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೆ ಧೈರ್ಯವಾಗಿ ಪರೀಕ್ಷೆ ಬರೆಯಿರಿ. ಪೋಷಕರು ನಿಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಪಾಂಡುರಂಗ ಹೇಳಿದರು.
Key words: Preparing – SSLC- Examination – Mysore.