ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ –ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಡಿಸೆಂಬರ್,30,2024 (www.justkannada.in):  ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ. ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,   ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಪ್ರಿಯಾಂಕ್ ಖರ್ಗೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ. ಹೀಗಾಗಿ ಅವರನ್ನು ಕೆಳಗಿಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ ಎಂದರು.

Key words: Minister, Priyank Kharge, contractor, death, DCM, DK Shivakumar