ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರ ಕಸದ ಬುಟ್ಟಿಗೆ ಎಸೆದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ

ಚಾಮರಾಜನಗರ, ಜುಲೈ,15,2024 (www.justkannada.in): ಸಿಎಂ ಸಿದ್ದರಾಮಯ್ಯಗೆ  ರೈತರು ನೀಡಿದ್ದ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆದಿರುವ ನಡೆಯನ್ನ  ಖಂಡಿಸಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ, ಸಾಮೂಹಿಕ ನಾಯಕತ್ವದ ರೈತ ಸಂಘದ ವತಿಯಿಂದ  ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಸಾಮೂಹಿಕ ನಾಯಕತ್ವ ರಾಜ್ಯ ರೈತ ಸಂಘಟನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದ ಪ್ರತಿಭಟನೆ ನಡೆಯಿತು.  ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಜಾಥಾ ಆರಂಭವಾಗಿ ಸಂಘಟನೆ ಪದಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗ ಹಾಗೂ ರೈತರ ಮಗ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಜಿಲ್ಲೆಯ ರೈತರ ಜಲ್ವಂತ ಸಮಸ್ಯೆಗಳ ಕುರಿತು ರೈತರು ನೀಡಿದ್ದ ಮನವಿಯನ್ನು ಕಸದ ಬುಟ್ಟಿಗೆ ಹಾಕುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸಿದ್ದಾರೆ. ಇದು ರಾಜ್ಯದ ಎಲ್ಲಾ ರೈತರಿಗೆ ಮಾಡಿದ ಅವಮಾನವಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಸಮಸ್ಯೆ ಕೇಳಲು ಆಸಕ್ತಿ ವಹಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಧಿಕಾರಿಗಳ ನಡೆ ತೀವ್ರ ಖಂಡನೀಯವಾಗಿದೆ. ಆದ್ದರಿಂದ ಈ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ರೈತ ಸಂಘಟನೆ ವತಿಯಿಂದ ಹೆದ್ದಾರಿ ರಸ್ತೆ ತಡೆದು ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಜೊತೆಗೆ ಚಾಮರಾಜನಗರ ಜಿಲ್ಲೆಗೆ ಸಿಎಂ ಹಾಗೂ ಸಚಿವ ಸಂಪುಟದ ಭೇಟಿ ನೀಡಿದರೆ ಕಪ್ಪು ಬಟ್ಟೆ ಪ್ರದರ್ಶಿಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Key words: Protest, farmers, condemning, petition, dustbin