ಮೈಸೂರು,ಸೆಪ್ಟೆಂಬರ್,30,2020(www.justkannada.in) : ಉತ್ತರಪ್ರದೇಶದ ಹತ್ರಾಸ್ ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 19 ವರ್ಷದ ಯುವತಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರ ಖಂಡಿಸಿ, ತಪ್ಪಿತಸ್ಥರಿಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ಸ್ ಆರ್ಗನೈಜೇಶನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಛೇರಿ ಬಳಿ ಜಮಾವಣೆಗೊಂಡ ಪ್ರತಿಭಟನಕಾರರು ಅತ್ಯಾಚಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಂಡು ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಪಿ.ಎಸ್.ಸಂಧ್ಯಾ ಮಾತನಾಡಿ, ನಮ್ಮ ದೇಶದಲ್ಲಿ ಮಹಿಳೆಯರ ಶೋಚನೀಯ ಮತ್ತು ವಾಸ್ತವ ಪರಿಸ್ಥಿತಿಯನ್ನು ಇಂತಹ ಘಟನೆಗಳು ತೋರಿಸುತ್ತವೆ. ಹಲವಾರು ದೊಡ್ಡ ಭಾಷಣಗಳ ಹೊರತಾಗಿಯೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್ತು ಅದೇ ಬಿಜೆಪಿ ನೇತೃತ್ವದ ಯುಪಿ ಸರಕಾರ ಮಹಿಳೆಯರ ಹಾಗೂ ಮಕ್ಕಳ ಘನತೆಯನ್ನು ಕಾಪಾಡುವಲ್ಲಿ ಸೋತು ಹೋಗಿದೆ ಎಂದು ಕಿಡಿಕಾರಿದರು.
ಭಾರತೀಯ ಸಂಸ್ಕೃತಿಯ ಹರಿಕಾರರು ಈ ದೇಶದ ಮಹಿಳೆಯರನ್ನು ರಕ್ಷಿಸುವುದರ ಕುರಿತು ಯಾವುದೇ ಕಾಳಜಿಯನ್ನು ಹೊಂದಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಜನರ ರಕ್ಷಣೆ ಮಾಡಬೇಕಾದ ಪೊಲೀಸರೇ ಅಪರಾಧಿಗಳೊಂದಿಗೆ ನಿಂತಿರುವುದು ಅತ್ಯಂತ ನೋವು ತರಿಸುತ್ತದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.
ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟಿನಲ್ಲಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆಯನ್ನು ವಿಧಿಸಬೇಕು. ಅಶ್ಲೀಲತೆ, ಡ್ರಗ್ಸ್ ಮತ್ತು ಮದ್ಯವನ್ನು ಕೊನೆಗೊಳಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದರು.
key words : Protest-condemning-massacre-Hatras