ಬೆಂಗಳೂರು,ಜುಲೈ,16,2021(www.justkannada.in) ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸಿ ಎಂದು ಪ್ರಧಾನಿ ಮೋದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಕರ್ನಾಟಕ ಸೇರಿ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಇಳಿಮುಖವಾಗಿದ್ದು, 1900 ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ಸುಮಾರು 400ಕ್ಕೆ ಇಳಿದಿದೆ. ಪಾಸಿಟಿವಿಟಿ ದರ ಶೇ. 1.42 ರಷ್ಟಿದ್ದು, ಮರಣ ಪ್ರಮಾಣ ಶೇ. 1.25 ಕ್ಕೆ ಇಳಿದಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಈ ವರೆಗೆ 2.62 ಕೋಟಿ ಲಸಿಕೆ ನೀಡಲಾಗಿದ್ದು, ಪ್ರತಿ ದಿನ 5 ಲಕ್ಷ ಡೋಸ್ ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸುವಂತೆ ಸಿಎಂ ಬಿಎಸ್ ವೈ ಪ್ರಧಾನಿ ನರೇಂದ್ರಮೋದಿಗೆ ಮನವಿ ಮಾಡಿದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದಿಂದ ಡಿಸಿಎಂಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಎಂ. ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Provide -1.5 crore -dose -vaccine -per month – state- CM BS yeddyurappa – PM Modi