ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿ- ಸಿದ್ಧರಾಮಯ್ಯ ಆಗ್ರಹ.

ಬೆಂಗಳೂರು,ಜುಲೈ,13,2021(www.justkannada.in): ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.jk

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಅವರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯದೊರಕಿಸಿಕೊಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.

2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ  ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ ಎಂದು ಕೇಂದ್ರಕ್ಕೆ ಚಾಟಿ ಬೀಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ENGLISH SUMMARY…..

Former CM Siddaramaiah requests Govt. of India to allow writing Nationalized Banks recruitment exams in Kannada
Bengaluru, July 13, 2021 (www.justkannada.in): Former Chief Minister and leader of the opposition in the Assembly Siddaramaiah has urged the Govt. of India to allow writing the Nationalized Bank recruitment exams in Kannada.
By not allowing to write the exams conducted for recruitment in nationalized banks, the Narendra Modi government has betrayed Kannadigas. The recent circular issued by the Institute of Banking Personnel Selection (IPBS) is proof of this betrayal. The Govt. of India should immediately look into this matter and rectify the injustice meted out to Kannadigas and provide justice, he has demanded.
“The IPBS has invited applications for recruitment of 3,000 posts in eleven nationalized banks, out of which 407 posts are in Karnataka. Due to the injustice, Kannadiga youth who are already facing unemployment problems are deprived of getting jobs in banks. Before 2014 there was a provision to write the exams in state languages. But the Govt. of India amended the rules, betraying the non-English and non-Hindi language speaking youth of the country. Our party had opposed this and had even written to the Govt. of India. Following this, the Union Finance Minister had announced in the Lok Sabha that the Govt. of India would allow writing the banking exams in the Kannada language. However, it has not been fulfilled,” he said.
Keywords: Former CM Siddaramaiah/ Banking exams/ Nationalized banks/ recruitment/ exams/ Kannada language

Key words: Provide -examination -Nationalized Banks- Recruitment- Examination – Kannada Language-Siddaramaiah