ಬೆಂಗಳೂರು,ಅಕ್ಟೋಬರ್,16,2020(www.justkannada.in) : ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.
ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷ್ಣಾ ನದಿಯಲ್ಲಿ ನೀರಿನ ಹರಿವು 2.30 ಲಕ್ಷ ಕ್ಯುಸೆಕ್ ಗಿಂತ ಅಧಿಕಗೊಂಡಾಗ ಮಾತ್ರ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲ ಎಂದರು.
ಹಿಂದೆ ಪ್ರವಾಹದಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣವೇ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸಚಿವ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಯ ಪ್ರಮಾಣ ಇದೀಗ ಕಡಿಮೆಯಾಗಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮನೆ ಹಾಗೂ ಬೆಳೆಹಾನಿಯ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ ರೈತರಿಗೆ ಪರಿಹಾರ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ. ಆದಷ್ಟು ಬೇಗನೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು.
ಕೊರೊನಾ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಚನೆ
ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲ ತಾಲ್ಲೂಕು ಸ್ಥಳಗಳಲ್ಲೂ ಅಗತ್ಯ ವೈದ್ಯಕೀಯ ಸೌಲಭ್ಯ ಲಭಿಸುವಂತೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಕಳೆದ ಎರಡು ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ಆದರೆ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಸೌಲಭ್ಯ ಹೊಂದಿರುವ ಬೆಡ್ ಗಳು ಸೇರಿದಂತೆ ಯಾವುದೇ ರೀತಿಯ ಕೊರತೆಯಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ತಿಳಿಸಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನೀರಾವರಿ ನಿಗಮದ ಬೆಳಗಾವಿ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಇತರರು ಇದ್ದರು.
key words : Rainfall-low-no-anxiety-district-Minister Ramesh Zarakiholi