ಬೆಂಗಳೂರು,ಅಕ್ಟೋಬರ್,29,2024 (www.justkannada.in): ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದ್ದು ಈ ಸಂಬಂಧ ವರದಿ ನೀಡಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದೆ. ಅಲ್ಲದೆ ವರದಿ ಸಲ್ಲಿಕೆಯಾಗುವವರೆಗೆ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸದಂತೆ ನಿರ್ಧಾರ ಮಾಡಲಾಗಿದೆ. ಈ ಸಂಬಂಧ ಉಂಟಾಗಿರುವ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್ ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ.
ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.
ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Key words: recruitment, process, continue, CM Siddaramaiah