ಈ ಬಾರಿ ಅದ್ದೂರಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆ: ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನ ಕೊಟ್ಟ ಅಪರ ಜಿಲ್ಲಾಧಿಕಾರಿ

ಮೈಸೂರು ಜನವರಿ,15,2025 (www.justkannada.in): ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಧ್ವಜಾರೋಹಣ ನೆರವೇರಿಸುವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಆಚರಣೆಯ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಡಾ.ಪಿ ಶಿವರಾಜು,  ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಗಣರಾಜ್ಯ ದಿನಾಚರಣೆಯನ್ನು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಪಂಜಿನ ಕವಾಯತು ಆವರಣದಲ್ಲಿ ನಡೆಯುವ ಪರೇಡ್ ವ್ಯವಸ್ಥೆಯನ್ನು ನಗರ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು. ಧ್ವಜಸ್ತಂಭ , ಡಯಾಸ್ ಹಾಗೂ ಸ್ವಚ್ಚತೆ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವ್ಯವಸ್ಥೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಧ್ಯತೆ ನೀಡಬೇಕು. ಉತ್ತಮವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳಿಗೆ ಹಾಗೂ ಉತ್ತಮವಾಗಿ ಪರೇಡ್ ಮಾಡುವ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಸಂಜೆ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವವು. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ವಿವಿಧ ಭಾಗಗಳಿಂದ ಉತ್ತಮ ಸಾರಿಗೆ ಸೌಲಭ್ಯವನ್ನು ಕೆಎಸ್ ಆರ್ ಟಿ ಸಿ ವತಿಯಿಂದ ಒದಗಿಸಬೇಕು. ಸ್ವಾಗತ ಸಮಿತಿಯ ವತಿಯಿಂದ ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರಿಗೆ, ಅಧಿಕಾರಿಗಳಿಗೆ ಮತ್ತು ಎನ್ ಜಿಓಗಳಿಗೆ ವಿತರಣೆ ಮಾಡಬೇಕು. ಮೈಸೂರು ಹಾಲು ಒಕ್ಕೂಟದ ವತಿಯಿಂದ ಭಾಗವಹಿಸುವ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೂಚಿಸಿದರು.

ಪ್ಲಾಸ್ಟಿಕ್ ಧ್ವಜ ನಿಷೇಧ ಮಾಡಲಾಗಿದೆ. ಪ್ಲಾಸ್ಟಿಕ್ ಧ್ವಜ ಮಾರಾಟ ಕಂಡು ಬಂದರೆ ಕಾನೂನು ರೀತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸರ್ಕಾರಿ ನೌಕರರ ಹಾಜರಾತಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.  ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Key words: Republic Day, mysore, ADC, Dr. P Shivaraju