ಬೆಂಗಳೂರು,ಡಿಸೆಂಬರ್,31,2020(www.justkannada.in): ನಾಳೆಯಿಂದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಆದರೆ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ. ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರ ತರುವುದು ಕಡ್ಡಾಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ನಾಳೆ ಶಾಲಾ-ಕಾಲೇಜು ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇನ್ನೂ ಮುಂದುವರೆದು ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ನಾಳೆ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಆರಂಭಗೊಳ್ಳುತ್ತಿದೆ. ಮಕ್ಕಳಿಗೆ ಶೀತ, ಜ್ವರ, ನೆಗಡಿಯಂತ ಲಕ್ಷಣಗಳಿದ್ದರೇ ಕಳುಹಿಸಬೇಡಿ. ನಮಗೆ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಿಂತ ಅವರ ಆರೋಗ್ಯವೂ ಸಹ ಮುಖ್ಯವಾಗಿದೆ ಎಂದರು.
ಬೆಂಗಳೂರಿನ ಸುತ್ತಮುತ್ತಲ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಜಿಲ್ಲೆಗಳಲ್ಲಿ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಿಕ್ಷಕರ ಜತೆ ಮಾತನಾಡಿದ್ದೇನೆ. ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆತಂಕ ಇದ್ದರೇ ಶಾಲೆಗೆ ಕಳುಹಿಸುವುದು ಬೇಡ. ಮಕ್ಕಳನ್ನ ಶಾಲೆಗೆ ಕಳುಹಿಸುವುದು ಕಡ್ಡಾಯವಲ್ಲ. ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಶಾಲಾಕಾಲೇಜಿಗೆ ತರಬೇಕು ಎಂದರು.
ನಾಳೆ ಶೇ. 50ರಷ್ಟು ವಿದ್ಯಾರ್ಥಿಗಳ ಆಗಮನದ ನಿರೀಕ್ಷೆ ಇದೆ. ಇಂದು ರಾತ್ರಿ ಕೇಂದ್ರ ಸರ್ಕಾರ ಸಿಬಿಎಸ್ ಇ ಪರೀಕ್ಷಾ ದಿನಾಂಕ ಪ್ರಕಟಿಸಬಹುದು. ಮುಂದೆ ಜೆಇಇ ಮತ್ತು ನೀಟ್ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
Key words: School-college-start –tomorrow-minister-Suresh Kumar