ಬೆಂಗಳೂರು, ಅಕ್ಟೊಬರ್,09,2020 (www.justkannada.in): ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು.
ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗಾಗಿ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಸೆಪ್ಟೆಂಬರ್ 30 ರವರೆಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು. ಇದೀಗ ದಾಖಲಾತಿಗೆ ನೀಡಲಾಗಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.