ಮೈಸೂರು ಫೆಬ್ರವರಿ,28,2025 (www.justkannada.in): ಮಾರ್ಚ್ 01 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿ ಎಂದು ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಲಕ್ಷ್ಮೀಕಾಂತರೆಡ್ಡಿ ಮಾತನಾಡಿದರು.
ಮೈಸೂರು ಜಿಲ್ಲೆಯಲ್ಲಿ ಮಾರ್ಚ್ 01 ರಿಂದ ಮಾರ್ಚ್ 20 ರವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.
ಮೈಸೂರು ತಾಲ್ಲೂಕಿನ 27, ನಂಜನಗೂಡು ತಾಲ್ಲೂಕಿನ 05, ಟಿ ನರಸೀಪುರ ತಾಲ್ಲೂಕಿನ 04, ಹುಣಸೂರು ತಾಲ್ಲೂಕಿನ 04, ಕೆ ಆರ್ ನಗರ ತಾಲ್ಲೂಕಿನ 02, ಸಾಲಿಗ್ರಾಮ ತಾಲ್ಲೂಕಿನ 01, ಹೆಚ್. ಡಿ ಕೋಟೆ ತಾಲ್ಲೂಕಿನ 03 ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ 04 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 10 ರೂಟ್ ಗಳನ್ನು ಮಾಡಲಾಗಿದೆ. ರೂಟ್ ಆಫೀಸರ್ ಗಳನ್ನು ನೇಮಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಿ ವಿತರಿಸಲು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿ ಪಿಎಸ್ ಅಳವಡಿಸಲಾಗಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು ಶಿಕ್ಷಕರು ಹಾಗೂ ಸಿಬ್ಬಂದಿಗಳು ಪರೀಕ್ಷೆ ಸುಸೂತ್ರವಾಗಿ ನಡೆಸಲು ಕ್ರಮ ವಹಿಸಬೇಕು. ಪರೀಕ್ಷೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಚೀಟಿಂಗ್ ಮಾಲ್ ಪ್ರಾಕ್ಟೀಸ್ ಗೆ ಅವಕಾಶ ನೀಡಬಾರದು. ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ. ಪರೀಕ್ಷೆ ಸಂಪೂರ್ಣ ವೆಬ್ ಕಾಸ್ಟಿಂಗ್ ಆಗುತ್ತದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಮೊಬೈಲ್ ನಂ ಗಳನ್ನು ಪಡೆದು ಇಟ್ಟುಕೊಳ್ಳಿ. ರೂಟ್ ಮ್ಯಾಪ್ ಪ್ರಕಾರ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು
ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರು ಮಾತನಾಡಿ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ಅಧಿಕಾರಿಗಳ ತಂಡ ನಿಗದಿತ ಸಮಯದಲ್ಲಿ ಜಿಲ್ಲಾ ಖಜಾನೆಯ ಬಳಿ ಇರಬೇಕು. ಪರೀಕ್ಷೆಯ ದಿನ ಚೆಸ್ಕಾಂ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಮಯ ಪಾಲನೆ ಸರಿಯಾಗಿ ಮಾಡಬೇಕು. ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಡಿ ಸಿ ಪಿ ಮುತ್ತುರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮರಿಸ್ವಾಮಿ, ಡಿಡಿಪಿಐ ಜವರೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Officials, prepared, second PUC, examination, Mysore DC, G. Laxmikant Reddy