ಬೆಂಗಳೂರು, ಡಿಸೆಂಬರ್ 21, 2019 (www.justkannada.in): ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವಾರದಲ್ಲಿ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ ಹದಿನೈದು ದಿನ ಕಳೆದರೂ ಹೈಕಮಾಂಡ್ ಸ್ವೀಕರಿಸಿದೇ ಹಾಗೆಯೇ ಉಳಿಸಿಕೊಂಡಿತ್ತು. ಅಲ್ಲದೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನದ ಕುರಿತು ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲು ಮಧುಸೂಧನ ಮಿಸ್ತ್ರಿ ಅವರನ್ನು ಕಳುಹಿಸಿಕೊಟ್ಟಿತ್ತು.
ಕುಮಾರಕೃಪ ಅತಿಥಿಗೃಹದಲ್ಲಿ ಮಧುಸೂಧನ ಮಿಸ್ತ್ರಿಅವರು ಪಕ್ಷದ ಹಿರಿಯ ನಾಯಕರೊಂದಿಗೆ ಒನ್ ಟು ಒನ್ ಸಭೆ ನಡೆಸಿದ ಸಂದರ್ಭದಲ್ಲಿ ಬಹುತೇಕ ನಾಯಕರು ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.