ಹುಬ್ಬಳ್ಳಿ,ಅಕ್ಟೋಬರ್,1,2024 (www.justkannada.in): ಮುಡಾ ಹಗರಣ ಸಂಬಂಧ ಸೈಟ್ ವಾಪಸ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಂಸದ ಬಸವರಾಜ ಬೊಮ್ಮಾಯಿ, ಮುಡಾ ಸೈಟ್ ವಾಪಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಮುಡಾ ಹಗರಣ ಸಂಬಂಧ ಸೈಟ್ ವಾಪಸ್ ಮೂಲಕ ಅಕ್ರಮ ಆಗಿರುವುದನ್ನು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ, ಪ್ರಕರಣ ದಾಖಲಾಗಿ, ತನಿಖೆ ನಡೆಯುತ್ತಿದೆ. ಈಗ ಸೈಟ್ ವಾಪಸ್ ನೀಡುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ಸೈಟ್ ವಾಪಸ್ ಮಾಡುವ ಮೂಲಕ ಮತ್ತಷ್ಟು ಸಂಕಷ್ಟ ತಂದುಕೊಂಡಿದ್ದಾರೆ. ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು ಎಂದು ಹೇಳಿದರು.
ಎಫ್‌ಐಆರ್ ಆದಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್ ಐ ಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಹಿಂದೆ ಬಿಎಸ್ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಹೇಳಿದ್ದನ್ನ ನೆನಪಿಸಿಕೊಳ್ಳಲಿ, ಆಗ ಯಡಿಯೂರಪ್ಪ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈಗ ಇದೇ ಮಾತು ಸಿಎಂ ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ. ಸೈಟ್ ವಾಪಸ್ ನೊಂದಿಗೆ ಅಕ್ರಮ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
Key words: site, Return, CM, accepted, illegal, Basavaraja Bommai