ಬೆಂಗಳೂರು,ಜೂ,10,2020(www.justkannada.in): ಶಿಕ್ಷಣ ವ್ಯವಸ್ಥೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ರೀತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಎಸ್ಎಸ್ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತೆಯ ಕುರಿತಂತೆ ರಾಜ್ಯಾದ್ಯಂತ 31 ಜಿಲ್ಲಾ ಕೇಂದ್ರಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಸುಮಾರು ಐದು ಸಾವಿರ ಕಿಲೋ ಮೀಟರ್ ಗಳಷ್ಟು ಸಂಚಾರ ಕೈಗೊಂಡು, ಸಭೆ ನಡೆಸಿ ನಿರ್ದೇಶನ ನೀಡಿರುವ ಸಚಿವ ಸುರೇಶ್ ಕುಮಾರ್, ಇಂದು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದೆ, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಪರೀಕ್ಷೆ ಯಶಸ್ವಿಯಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿ ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆಯಬೇಕು. ಪರೀಕ್ಷೆಗೆ ಮುಂಚೆಯೇ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್ ಮಾಡಬೇಕು. ಪ್ರತಿ ದಿನದ ಪರೀಕ್ಷೆಯ ಬಳಿಕವೂ ಸ್ಯಾನಿಟೈಜ್ ಕ್ರಮಗಳನ್ನು ಅನುಸರಿಸಬೇಕು ಎಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಶ್ನೆ ಪತ್ರಿಕೆಯಾಧಾರಿತವಾದ ವಿಶೇಷ ಪುನರ್ಮನನ ತರಗತಿಗಳನ್ನು ಇದೇ ತಿಂಗಳ 12 ರಿಂದ 17 ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದು ಸಚಿವ ಸುರೇಶ್ ಕುಮಾರ್ ಮನವಿ ಮಾಡಿದರು.
Key words: SSLC -Examination – build -confidence – education system- Education Minister -Suresh Kumar.