ಬೆಂಗಳೂರು,ಏಪ್ರಿಲ್,19,2025 (www.justkannada.in): ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭವಾಗಿದ್ದು, ಈ ಮಾಸಾಂತ್ಯದ ವೇಳೆಗೆ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರನ್ನು ಯಾವಾಗಲೂ ಚುನಾವಣೆಯಿಲ್ಲದೆ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತದೆ. ಇದರಂತೆ ಪಕ್ಷವು ಅರ್ಹತಾ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿದ್ದು, ವಿವಿಧ ಜಿಲ್ಲೆಗಳಿಗೆ ಪದಾಧಿಕಾರಿಗಳ ನೇಮಕಯನ್ನೂ ಅಂತಿಮಗೊಳಿಸಿದೆ.
ಏಪ್ರಿಲ್ ಅಂತ್ಯಕ್ಕೆ ನೂತನ ಅಧ್ಯಕ್ಷರ ಘೋಷಣೆ ಮಾಡುವ ಸಂಭವವಿದ್ದು, ಬಿ.ವೈ ವಿಜಯೇಂದ್ರ ಅವರೇ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನ ಹಿಂದಿನಿಂದಲೂ ಅವಿರೋಧವಾಗಿ ಆಯ್ಕೆ ಮಾಡುತ್ತ ಬಂದಿದ್ದು, ಈಗಾಗಲೇ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದಿದೆ. ಇದೇ ತಿಂಗಳ ಅಂತ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ 50% ರಾಜ್ಯಗಳಲ್ಲಿ ಅಧ್ಯಕ್ಷರ ಆಯ್ಕೆ ಪೂರ್ಣಗೊಳ್ಳಬೇಕು.
ಈಗಾಗಲೇ ಹಲವು ರಾಜ್ಯಗಳಲ್ಲಿ ಜಿಲ್ಲಾ ಮತ್ತು ರಾಜ್ಯಾಧ್ಯಕ್ಷರ ಪಟ್ಟಿ ಪ್ರಕಟವಾಗಿದ್ದು, ವಿವಿಧ ರಾಜ್ಯಗಳ ಅಧ್ಯಕ್ಷರ ಆಯ್ಕೆ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ ಇನ್ನು ಕೆಲವು ಜಿಲ್ಲೆಗಳ ಅಧ್ಯಕ್ಷ ನೇಮಕ ಬಾಕಿ ಇರುವ ಹಿನ್ನಲೆ ರಾಜ್ಯಾಧ್ಯಕ್ಷರ ಘೋಷಣೆಗೆ ಕೊಂಚ ವಿಳಂಬ ವಾಗಿದೆ ಎನ್ನಲಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದು ಯಾತ್ರೆ ಮುಗಿದ ಬಳಿಕ ಏಪ್ರಿಲ್ ಅಂತ್ಯ ಅಥವಾ ಮೇ ಮೊದಲ ವಾರದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಇನ್ನು ಹಾಲಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಎದುರಿಸುವ ವಿಶ್ವಾಸದಲ್ಲಿದೆ ಬಿಜೆಪಿ.
ಕಳೆದ 2023 ರ ನವೆಂಬರ್ ನಲ್ಲಿ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಇತಿಹಾಸದಲ್ಲೇ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಇದೀಗ ಅವಿರೋಧ ಆಯ್ಕೆ ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಮತ ಪತ್ರಗಳ ಮೂಲಕ ಹೊಸ ಅಧ್ಯಕ್ಷರ ಆಯ್ಕೆ ಮಾಡುವಂತೆ ಒತ್ತಾಯ ಕೇಳಿ ಬಂದಿದ್ದು, ವಿಜಯೇಂದ್ರ ವಿರುದ್ಧ ಮತ್ತೊಮ್ಮೆ ಸಮರ್ಥ ನಾಯಕನ ಕಣಕ್ಕಿಳಿಸಲು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಮುಂದಿನ ಮೂರು ವರ್ಷಗಳಿಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಿವೈ ವಿಜಯೇಂದ್ರರನ್ನೇ ಮುಂದುವರೆಸಲು ವರಿಷ್ಠರು ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ವಿಜಯೇಂದ್ರರಿಗೆ ಅಡ್ಡಗಾಲಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದ್ದು, ಈ ಬಳಿಕ ಬಿವೈ ವಿಜಯೇಂದ್ರ ವಿರುದ್ಧ ಸೊಲ್ಲೆತ್ತಲು ಬಿಜೆಪಿ ನಾಯಕರು ಅಂಜುತ್ತಿದ್ದಾರೆ. ಹೀಗಾಗಿ ಈ ತಿಂಗಳ ಅಂತ್ಯದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ.
Key words: New, state, BJP, president, end of the month