ಮೈಸೂರು,ಡಿಸೆಂಬರ್,23,2024 (www.justkannada.in): ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಆವರಣದಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್’ ಅವರು ಮತ್ತು ‘ಡಾ.ಬಾಬು ಜಗಜೀವನರಾಂ’ ಅವರ ಪ್ರತಿಮೆ ಅನಾವರಣಗೊಳಿಸಿದರು.
ಹಾಗೆಯೇ ನವೀಕರಣಗೊಂಡ ಕಚೇರಿಯನ್ನು ಸಚಿವ ಹೆಚ್.ಸಿ ಮಹದೇವಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಅಂಬೇಡ್ಕರ್ ಸಂವಿಧಾನ ಬದಲು ಮನುಸಂಸ್ಕ್ರತಿಯ ಸರ್ಕಾರ ನಡೆಸಲು ಯತ್ನ: ಬಿಜೆಪಿ ವಿರುದ್ದ ಕಿಡಿ
ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿಚಾರ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಬಿಜೆಪಿ ಭೌದ್ಧಿಕವಾಗಿ ದಿವಾಳಿಯಾಗಿದೆ. ಅಂಬೇಡ್ಕರ್ ಸಂವಿಧಾನ ಬದಲು ಮನುಸಂಸ್ಕ್ರತಿಯ ಸರ್ಕಾರ ನಡೆಸಲು ಯತ್ನಿಸುತ್ತಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಯಾವ ನೈತಿಕತೆಯನ್ನ ಬಿಜೆಪಿ ಉಳಿಸಿಕೊಂಡಿಲ್ಲ. ಅಂಬೇಡ್ಕರ್ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಮೇಲೆ ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಕಳೆದ 11 ವರ್ಷಗಳಿಂದ ಬಿಜೆಪಿ ಸರ್ಕಾರ ಸಂವಿಧಾನದ ಆಶಯಕ್ಕೆ ವಿರುದ್ದವಾಗಿಯೇ ನಡೆದುಕೊಂಡಿದೆ ಎಂದರು.
ಸಿಟಿ ರವಿ ಮೇಲೆ ನಕಲಿ ಎನ್ ಕೌಂಟರ್ ಮಾಡಲು ಪ್ಲಾನ್ ಆಗಿತ್ತು ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ತಪ್ಪು ಮಾಡಿದವರು ಮಾತ್ರ ಇಂತಹ ಸುಳ್ಳುಗಳನ್ನ ಹುಡುಕುತ್ತಾರೆ. ಸಿ.ಟಿ ರವಿ ವಿಚಾರದಲ್ಲಿ ಬಿಜೆಪಿ ಹೇಳುತ್ತಿರುವುದೆಲ್ಲಾ ಸುಳ್ಳು ಎಂದರು.
Key words: Minister, H.C. Mahadevappa, statues, Dr. B.R. Ambedkar, Dr. Babu Jagjivan Ram.