ಬೆಂಗಳೂರು, ಜು.10, 2022 : (www.justkannada.in news) ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ.
ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿ ಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.
key words : The State Higher Education Council -SHEC- has prepared – common calendar of events – for academic activities.