ಮಾಲೂರು,ಆ,19,2020(www.justkannada.in): ಕೊರೋನಾ ವಾರಿಯರ್ಸ್ ಗಳಿಗೆ ತಲಾ 3000 ರೂಪಾಯಿ ಕೊಡಬೇಕೆಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈಗಾಗಲೇ ಕಾರ್ಯನಿರತ 41711 ಆಶಾ ಕಾರ್ಯಕರ್ತೆಯರಲ್ಲಿ ಬಹುತೇಕರಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಗಿದ್ದು, ಇನ್ನು ಸಾವಿರ ಮಂದಿಗಷ್ಟೇ ಬಾಕಿ ಇದೆ. ಅದೂ ಶೀಘ್ರದಲ್ಲಿ ಮುಗಿಯಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮಾಧ್ಯಮದ ಜತೆ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಸಹಕಾರ ಇಲಾಖೆ ವತಿಯಿಂದ ಅನೇಕ ಜನಪರ ಯೋಜನೆಗಳಿಗೆ ಚಾಲನೆ ನೀಡುವುದರ ಜೊತೆಗೆ ಸರ್ಕಾರಕ್ಕೂ ಬಲ ತುಂಬುವ ಕೆಲಸ ಮಾಡುತ್ತಿದ್ದು, ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 53 ಕೋಟಿ ರೂಪಾಯಿ ದೇಣಿಗೆಯನ್ನು ಎಪಿಎಂಸಿ ಹಾಗೂ ಸಹಕಾರಿ ಬ್ಯಾಂಕ್ ಗಳ ಮೂಲಕ ಸಂಗ್ರಹಿಸಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳೀನ್ ಕುಮಾರ್ ಕಟೀಲ್ ಅವರ ಜೊತೆ ನಾನೂ ಸಹ ಭೇಟಿ ಕೊಟ್ಟಿದ್ದೇನೆ. ಪ್ರಕರಣದ ಹಿಂದೆ ಯಾರಿದ್ದಾರೋ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಬೇಕು. ಜೊತೆಗೆ ಅಲ್ಲಿನ ಸ್ಥಿತಿ ಏನು ಎಂಬ ಬಗ್ಗೆ ಗೃಹಸಚಿವರಿಗೂ ಮಾಹಿತಿ ನೀಡಲಾಗಿದ್ದು, ಅವರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಈಗಾಗಲೇ 350 ಮಂದಿಯನ್ನು ಬಂಧಿಸಲಾಗಿದೆ. ಗೃಹಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಆಸ್ತಿಗೆ ಸಂಬಂಧಪಟ್ಟಂತೆ ಗಲಭೆಕೋರರಿಂದಲೇ ನಷ್ಟವನ್ನು ಭರಿಸಲಾಗುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧ ಮಾಡಬೇಕು ಎಂಬ ಬಗ್ಗೆ ಬಿಜೆಪಿ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹಗಳು ಕೇಳಿಬರುತ್ತಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
Key words: thousand -Asha worker- Minister -S T Somashekhar.