ಮೈಸೂರು, ಏಪ್ರಿಲ್, 13,2024 (www.justkannada.in): ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ನಾಳೆ ಪ್ರಧಾನಿ ಮೈಸೂರು ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆ.
ಸಿಎಂ ತವರು ಜಿಲ್ಲೆಯಿಂದಲೇ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಿದ್ದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ.
ನಾಳೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ವರಿಷ್ಟ ಎಚ್.ಡಿ ದೇವೇಗೌಡ ಪ್ರಧಾನಮಂತ್ರಿ ಮೋದಿ ಜೊತೆ ಸೇರಿ ಜಂಟಿ ಪ್ರಚಾರ ನಡೆಸಲಿದ್ದಾರೆ.
ನಾಳೆ ಸಂಜೆ ನಾಲ್ಕು ಗಂಟೆಗೆ ಜೆಡಿಎಸ್ ಬಿಜೆಪಿ ಕಾರ್ಯಕರ್ತರನ್ನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಸಮಾವೇಶದಲ್ಲಿ ನಾಲ್ಕು ಕ್ಷೇತ್ರಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಲು ಜೆಡಿಎಸ್-ಬಿಜೆಪಿ ನಾಯಕರು ಪ್ಲ್ಯಾನ್ ರೂಪಿಸುತ್ತಿದ್ದಾರೆ.
ಸಮಾವೇಶದಲ್ಲಿ ಮಾಜಿ ಸಿಎಂಗಳಾದ ಎಚ್.ಡಿ ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ದೋಸ್ತಿ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಬಿಜೆಪಿ ಜೆಡಿಎಸ್ ನಾಯಕರು ಸಿದ್ದತೆ ನಡೆಸಿದ್ದಾರೆ. ಈ ನಡುವೆ ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಮಾತನಾಡಿ ಸಿಎಂ ಸಿದ್ದರಾಮಯ್ಯ ಗರ್ವ ಭಂಗ ಮಾಡಬೇಕೆಂದು ಹೇಳಿಕೆ ನೀಡಿದ್ದರು.
ಇದೀಗ ಇಬ್ಬರು ನಾಯಕರ ಮೈಸೂರು ಭೇಟಿಯಿಂದ ಜೆಡಿಎಸ್ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದ್ದು, ತವರು ಜಿಲ್ಲೆಯಲ್ಲಿ ಸಿಎಂ ಹಣಿಯಲು ಮೈತ್ರಿ ನಾಯಕರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ.
Key words: mysore- PM- Modi- Tomorrow -campaign