ಬೆಂಗಳೂರು,ಏಪ್ರಿಲ್,7,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹೂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ರಾಜ್ಯ ಸರ್ಕಾರ ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಿದ್ದು, ಇದೀಗ ಖಾಸಗಿ ಬಸ್ ಗಳಿಗೆ ರಹದಾರಿ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ಸಾರಿಗೆ ಸಂಸ್ಥಗಳ ನೌಕರರು ಇಂದಿನಿಂದ ಅನಿರ್ಧಿಷ್ಟ ಕಾಲ ಮುಷ್ಕರ ಹೂಡಿದ್ದು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಖಾಸಗಿ ಬಸ್ ಗಳಿಗೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅಧಿಸೂಚನೆ ಹೊರಡಿಸಿದ್ದಾರೆ. ಸಾರಿಗೆ ಸಂಸ್ಥೆಗಳ ನೌಕರರು ದಿನಾಂಕ 07-04-2021ರಿಂದ ಅನಿರ್ಧಿಷ್ಟ ಕಾಲ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆಯನ್ನು ಖಾಸಗಿ ಪ್ರಯಾಣಿಕರ ವಾಹನಗಳ ಮುಖಾಂತರ ಕಲ್ಪಿಸಲುವ ಸಂಬಂಧ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗಿದೆ.
ಇದರಿಂದಾಗಿ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(3)(ಎಫ್)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮುಷ್ಕರದ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(1)ರಂತೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.
Key words: Transport -Employees –Strike – Private Buses-permit- State – Government