ಅಲೆಮಾರಿ, ಆದಿವಾಸಿ ಸಮುದಾಯಗಳ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ-ಡಾ.ಸಿ. ಎಸ್. ದ್ವಾರಕನಾಥ್

ಮೈಸೂರು,ಡಿಸೆಂಬರ್, 26,2024 (www.justkannada.in): ಅಲೆಮಾರಿ ಹಾಗೂ ಆದಿವಾಸಿ ಸಮುದಾಯದ ಜನರು ನಿವೇಶನ, ಶೌಚಾಲಯ ಮತ್ತು ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು,ಈ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರವನ್ನು ನೀಡಿ ಬಗೆಹರಿಸಲಾಗುವುದು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಅಧ್ಯಕ್ಷರಾದ ಸಿ.ಎಸ್. ದ್ವಾರಕನಾಥ್ ಅವರು ಹೇಳಿದರು.

ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ಪಂಚಾಯತ್ನ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಜನಾಂಗದವರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಅಲೆಮಾರಿ ಹಾಗೂ ಆದಿವಾಸಿಗಳ ಸಮಸ್ಯೆಗಳು ಬೇರೆ ಬೇರೆಯಾಗಿದೆ. ಪ್ರಸ್ತುತ ಆದಿವಾಸಿಗಳು ವಿವಿಧ ರೀತಿಯ ಆರೋಗ್ಯದ ಸಮಸ್ಯೆಗಳಿಂದ ಸಾವಿನ ಕಡೆ ಮುಖ ಮಾಡುತ್ತಿದ್ದು, ಇದರ ಬಗ್ಗೆ ಜಿಲ್ಲಾಡಳಿತ ವಿಶೇಷ ಗಮನ ವಹಿಸಿ ಅವರಿಗೆ ಅರೋಗ್ಯ ಭದ್ರತೆಯನ್ನು ಒದಗಿಸಿಕೊಡಬೇಕು ಎಂದು ಹೇಳಿದರು.

ಇಂದು ನಡೆದ ಕುಂದು ಕೊರತೆ ಸಭೆಯಲ್ಲಿ ಬೆಳಕಿಗೆ ಬಾರದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವ ಕೆಲಸವಾಗಿದೆ. ಅದರಲ್ಲಿ ಜಾತಿ ಪ್ರಮಾಣ ಪತ್ರದ ಸಮಸ್ಯೆ, ಭೂಮಿ ಸಮಸ್ಯೆ, ವಿದ್ಯುತ್ ಸಮಸ್ಯೆ, ರುಧ್ರ ಭೂಮಿ ಸಮಸ್ಯೆ ಸೇರಿದಂತೆ ಇನ್ನಿತರ ಗಂಭೀರ ಸಮಸ್ಯೆಗಳ ಬಗ್ಗೆ ಅರಿವಾಗಿದ್ದು, ಶೀಘ್ರದಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಮುಂಬರುವ ತಿಂಗಳಲ್ಲಿ ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಅಲೆಮಾರಿ ಹಾಗೂ ಆದಿವಾಸಿಗಳನ್ನು ಸೇರಿಸಿ ಆಯೋಗವನ್ನು ಸ್ಥಾಪಿಸಲು ಯೋಜಿಸಲಾಗಿದ್ದು, ಜನಾಂಗದಲ್ಲಿರುವ ಗೊಂದಲಗಳಿOದಾಗಿ ತಡವಾಗುತ್ತಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಗೊಂದಲಗಳನ್ನು ಮುಕ್ತವಾಗಿಸಿ ನಂತರ ಆಯೋಗದ ರಚನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಎಲ್ಲಾ ಅಲೆಮಾರಿ ಸಮುದಾಯದವರು ತಮ್ಮ ತಮ್ಮ ಸಮುದಾಯಗಳ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತಂದಿದ್ದೀರಾ. ತಮ್ಮ ಎಲ್ಲಾ ಸಮಸ್ಯೆಗಳನ್ನೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ತಮ್ಮ ಮನವಿಗಳನ್ನು ಸಂಬಂದಿಸಿದ ತಹಶೀಲ್ದಾರ್ ಅವರಿಗೆ ಕಳುಹಿಸಲಾಗುವುದು. ತಮ್ಮ ಮನವಿಗಳಿಗೆ ನಂಬರ್ ಕೊಟ್ಟು ಅವುಗಳನ್ನು ಒಂದು ತಿಂಗಳ ಒಳಗೆ ಪರಿಹರಿಸಲಾಗುವುದು. ನಂತರ ಸಭೆ ಕರೆದು ಈ ಸಮಸ್ಯೆಗಳ ಪರಿಹಾರ ಕುರಿತು ಪರಿಶೀಲನಾ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಸೀಲ್ದಾರ್ ಹಾಗೂ ಇಒ ಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವಂತಹ ಸಮಸ್ಯೆಗಳಿರುವ ಸ್ಥಳಗಳಿಗೆ ಭೇಟಿನೀಡಿ ತಮ್ಮ ಹಂತದಲ್ಲಿ ಪರಿಹಾರಗೊಳ್ಳುವ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿ, ಅದರ ವರದಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿಯ ಕೊರಜ, ಅಕ್ಕಿ-ಪಿಕ್ಕಿ, ಯಳವ, ದೊಂಬರ, ಕೊರ್ಮ, ಜೇನು ಕುರುಬ, ಸೋಲಿಗ ಸೇರಿದಂತೆ ಇನ್ನಿತರ ಸಮುದಾಯದ ಜನರು ತಮ್ಮಲ್ಲಿರುವ ನಿವೇಶನ, ಕುಡಿಯುವ ನೀರು, ಚರಂಡಿ, ರುದ್ರ ಭೂಮಿ ಹಾಗೂ ವಿದ್ಯುತ್ ಸೇರಿದಂತೆ ಹಲವಾರು ಸಮಸ್ಯೆಗಳ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಗಳಾದ ಸವಿತಾ ಕೆ. ಎಂ., ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ. ಬಸವರಾಜು ಕೆ. ಎನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿ. ಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಹರೀಶ್ ಟಿ. ಕೆ. ಸೇರಿದಂತೆ ಎಲ್ಲಾ ತಾಲೂಕುಗಳ ತಹಸೀಲ್ದಾರ್ ಹಾಗೂ ಇ ಒ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯದ ಜನರು ಉಪಸ್ಥಿತರಿದ್ದರು.

Key words:  solution, nomadic, tribal communities, problems, Dr. C. S. Dwarkanath