ಜಾತಿ ಜನಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

ಮೈಸೂರು, ಅಕ್ಟೋಬರ್,16,2024 (www.justkannada.in): ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ  ಜಿಲ್ಲಾಧಿಕಾರಿ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಶೋಷಿತ ಸಮುದಾಯದ ಮುಖಂಡ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುವ ಅಗತ್ಯವಿಲ್ಲ. ಸುಮಾರು 170 ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ.  ಅಹಿಂದ ವರ್ಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ.

ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶೋಷಿತ ಸಮುದಾಯದ ಮುಖಂಡರಾದ, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ  ಬಿ.ಸುಬ್ರಹ್ಮಣ್ಯ, ಮಾಜಿ ಪಾಲಿಕೆ ಸದಸ್ಯ ಗೋಪಿ, ವಕೀಲ ಪುಟ್ಟ ಸಿದ್ದೇಗೌಡ, ವಿ ರಾಮಸ್ವಾಮಿ, ಬೋವಿ ನಿಗಮ ಮಾಜಿ ಅಧ್ಯಕ್ಷ ಸೀತಾರಾಮ್, ಕುರುಬರ ಸಂಘದ ಜಿಲ್ಲಾಧ್ಯಕ್ಷ  ಶಿವಪ್ಪ ಕೋಟೆ, ಎಸ್ ಡಿಪಿಐ ಪುಟ್ನಂಜ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಆನಂದ್, ಶಿವಣ್ಣ, ಸುನಿಲ್, ಬಸವರಾಜ್, ಕೆಂಪಣ್ಣ, ರಾಜ್ಯ ನಾಯಕರ ಸಂಘದ ಉಪಾಧ್ಯಕ್ಷ  ಲೋಕೇಶ್, ಮುಖಂಡರುಗಳಾದ ರವಿ, ಮೋಹನ್, ಅಪ್ಪು ಗೌಡ, ಜವರೇಗೌಡ, ರಮೇಶ,  ಶಿವಕುಮಾರ್ ಸೇರಿದಂತೆ ಅನೇಕ ಶೋಷಿತ ವರ್ಗದ ಮುಖಂಡರುಗಳು  ಉಪಸ್ಥಿತರಿದ್ದರು‌.

Key words: Union of Exploited Communities, Implementation, Caste Census Report