ಬೆಂಗಳೂರು, ಅ,23,2019(www.justkannada.in): ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಇಂದು ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿ ಪ್ರವಾಹ ಪರಿಹಾರದ ಬಗ್ಗೆ ಚರ್ಚೆ ಮಾಡಿದರು. ದುರದೃಷ್ಟವಶಾತ್ ಪ್ರವಾಹದಿಂದಾಗಿ 13 ಜನರು ಮೃತ ಪಟ್ಟಿದ್ದು, ಸುಮಾರು 10038 ಮನೆಗಳಿಗೆ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಹಾಗೂ ಹಾನಿಗೊಳಗಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿಸಿದರು.
ಪ್ರಸ್ತುತ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ. ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು. ಈಗಾಗಲೇ ಎನ್‍ಡಿಆರ್‍ಎಫ್‍ನ ಆರು ತಂಡಗಳು ಹಾಗೂ ರಾಯಚೂರಿನಲ್ಲಿ ಸೇನೆಯ ತಂಡವೂ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.
ಸಂತ್ರಸ್ತರಿಗಾಗಿ 28 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು, ಔಷಧಿ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಬೇಕು. ಹಿಂದೆ ಬಂದಿರುವ ದೂರುಗಳನ್ನು ಗಮನದಲ್ಲಿರಿಸಿಕೊಂಡು ಅವುಗಳನ್ನು ಸರಿಪಡಿಸಿ, ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರತಿ ಪರಿಹಾರ ಕೇಂದ್ರಕ್ಕೆ ನಿಯೋಜಿಸಬೇಕು ಎಂದು ಸಿಎಂ ಬಿಎಸ್ ವೈ ಸೂಚಿಸಿದರು.
ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 1027.54 ಕೋಟಿ ರೂ. ಲಭ್ಯವಿದ್ದು, ಪರಿಹಾರ ಕಾರ್ಯಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಬಿಡುಗಡೆ ಮಾಡಲಾಗುವುದು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ದೀಪಾವಳಿ ರಜೆಯ ನೆಪ ಹೇಳಿ ಕರ್ತವ್ಯದಿಂದ ವಿಮುಖರಾಗದೆ, ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಸಿಎಂ ಬಿಎಸ್ ವೈ ನಿರ್ದೇಶನ ನೀಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕಂದಾಯ ಇಲಾಖೆ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Key words: Video Conference – DC- CM BS Yeddyurappa-instructs – immediate action.