ಹಾಸನ ಡಿಸೆಂಬರ್, 5,2024 (www.justkannada.in): ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ಧನ್ಯವಾದ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.
ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ , ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ ಎಂದರು.
ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನರೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ ಎಂದು ಒಂದೊಂದಾಗಿ ವಿವರಿಸಿದರು.
ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು ಎಂದರು.
ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ ಎಂದು ಸವಾಲು ಹಾಕಿದರು.
ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೇ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಕೂಗಿದರು.
ನಬಾರ್ಡ್ ನಿಂದಾಗಿರುವ ಅನ್ಯಾಯವನ್ನ ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ?
ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ 58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ. ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯಕ್ಕೆ, ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕುಮಾರಸ್ವಾಮಿ ಅವರಿಗೆ ಮತ್ತು ಬಿಜೆಪಿ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ ಎಂದರು.
ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು ಎಂದು ಹಂತ ಹಂತವಾಗಿ ವಿವರಿಸಿದರು.
ಹಾಸನ ಮತ್ತೆ ಕಾಂಗ್ರೆಸ್ ತೆಕ್ಕೆಗೆ
ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಗಳಿಸಲಿದೆ. ಇದು ಶತಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
Key words: Hassan, Voters , God, CM Siddaramaiah